ಮೂಡುಬಿದಿರೆ, ಜುಲೈ 11: ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ, ಮಾನಸಿಕ ಆರೋಗ್ಯದ ಮಹತ್ವ ತಿಳಿಸುವ ಉದ್ದೇಶದಿಂದ ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಆಳ್ವಾಸ್ ಪುನರ್ಜನ್ಮ ಮದ್ಯ-ಮಾದಕ ವಸ್ತು ವ್ಯಸನ ಮುಕ್ತಿ ಹಾಗೂ ಮನೋರೋಗ ಚಿಕಿತ್ಸಾ ಕೇಂದ್ರ, ಮಿಜಾರು ಹಾಗೂ ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ “ವಿದ್ಯಾರ್ಥಿ ಮನೋಹಿತ” ಆರೋಗ್ಯ ಮಾಹಿತಿ ಕಾರ್ಯಾಗಾರ ಜ್ಯೋತಿನಗರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಶಾಲೆಯ ಮುಖ್ಯೋಪಾಧ್ಯಾಯಿನಿ ಆಪೋಲೀನೋ ಮೋನಿಸ್ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಣದ ಜೊತೆಗೆ ಆರೋಗ್ಯ, ಉತ್ತಮ ಮೌಲ್ಯಗಳು ಹಾಗೂ ವ್ಯಸನಮುಕ್ತ ಜೀವನದ ಅರಿವು ಅಗತ್ಯವಾಗಿದ್ದು, ಯುವವಾಹಿನಿಯ ಈ ಸಮಾಜಮುಖಿ ಕಾರ್ಯಕ್ರಮ ಶ್ಲಾಘನೀಯ ಎಂದು ಹೇಳಿದರು.
ಆಳ್ವಾಸ್ ಪುನರ್ಜನ್ಮ ಕೇಂದ್ರದ ಆಪ್ತ ಸಮಾಲೋಚಕ ಲೋಹಿತ್ ಬಂಟ್ವಾಳ ಅವರು ಮದ್ಯ ಮತ್ತು ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ದುಷ್ಪರಿಣಾಮಗಳನ್ನು ಉದಾಹರಣೆಗಳೊಂದಿಗೆ ವಿವರಿಸಿದರು. ಮಾನಸಿಕ ಒತ್ತಡವನ್ನು ಸಕಾರಾತ್ಮಕವಾಗಿ ನಿಭಾಯಿಸುವುದು, ಉತ್ತಮ ಸ್ನೇಹ ಬಳಗವನ್ನು ಆಯ್ಕೆ ಮಾಡಿಕೊಳ್ಳುವುದು ಹಾಗೂ ವ್ಯಸನಗಳಿಂದ ದೂರವಿರುವುದು ಆರೋಗ್ಯಕರ ಬದುಕಿನ ಮೂಲಮಂತ್ರ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಅಸೋಸಿಯೇಟ್ ಪ್ರೊಫೆಸರ್ ಡಾ. ಮಹಾಲಸ ಕಾಂತಿ ಅವರು ಹೋಮಿಯೋಪಥಿ ಚಿಕಿತ್ಸಾ ಪದ್ಧತಿಯ ವೈಶಿಷ್ಟ್ಯ, ಅದರ ಮೂಲತತ್ವ ಹಾಗೂ ಅಡ್ಡಪರಿಣಾಮಗಳಿಲ್ಲದ ಚಿಕಿತ್ಸೆಯ ಮಹತ್ವವನ್ನು ವಿವರಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಕ್ರೀಡಾ ನಿರ್ದೇಶಕ ಶಂಕರ್ ಎ. ಕೋಟ್ಯಾನ್ ಮಾತನಾಡಿ, ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾದಕ ವ್ಯಸನದ ಜಾಲ ವಿಸ್ತರಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಇಂತಹ ಜಾಗೃತಿ ಕಾರ್ಯಕ್ರಮಗಳು ಯುವಜನರನ್ನು ಸರಿದಾರಿಯಲ್ಲಿ ಮುನ್ನಡೆಸಲು ಪರಿಣಾಮಕಾರಿಯಾಗಿವೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ಅಧ್ಯಕ್ಷ ಗಿರೀಶ್ ಕೋಟ್ಯಾನ್ ಮಾರೂರು ಮಾತನಾಡಿ, ಶಿಕ್ಷಣ, ಆರೋಗ್ಯ ಹಾಗೂ ಸಮಾಜಮುಖಿ ಕಾರ್ಯಕ್ರಮಗಳನ್ನು ಘಟಕವು ನಿರಂತರವಾಗಿ ಹಮ್ಮಿಕೊಳ್ಳುತ್ತಿದ್ದು, ಮುಂದಿನ ದಿನಗಳಲ್ಲಿ ತಾಲೂಕಿನ ವಿವಿಧ ಶಾಲೆಗಳಲ್ಲಿಯೂ ಇಂತಹ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು. ವಿದ್ಯಾರ್ಥಿಗಳು ಇಂದಿನ ಕಾರ್ಯಾಗಾರದಿಂದ ಪಡೆದ ಮಾಹಿತಿಯನ್ನು ಜೀವನದಲ್ಲಿ ಅಳವಡಿಸಿಕೊಂಡು ಆರೋಗ್ಯವಂತ ಹಾಗೂ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಘಟಕದ ಸಮಾಜಸೇವಾ ನಿರ್ದೇಶಕ ಉಮೇಶ್ ಕೋಟ್ಯಾನ್, ಕೋಶಾಧಿಕಾರಿ ಜಯಶೀಲಾ ಎಸ್. ಪೂಜಾರಿ, ಸದಸ್ಯೆ ರತ್ನಾವತಿ, ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕುಮಾರಿ ಮನೀಷಾ ಕಾರ್ಯಕ್ರಮ ನಿರೂಪಿಸಿದ್ದು, ಗ್ರೇಸಿ ಡಿಸೋಜ ವಂದಿಸಿದರು


