ಮಾಣಿ, ಜುಲೈ 16: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಘಟಕದ ಸದಸ್ಯರ ಮಕ್ಕಳಿಗೆ ‘ಪ್ರತಿಭಾ ಗೌರವ ಅಭಿನಂದನಾ ಕಾರ್ಯಕ್ರಮ’ ಆಯೋಜಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಗಳಿಸಿದ ಆಧ್ಯಾ ಎಂ.ಎಸ್., ಗ್ರೀಷ್ಮಾ, ಪ್ರಗತಿ ಆರ್. ಸಾಲ್ಯಾನ್, ಹನ್ಶಿಕಾ ಎಸ್.ಡಿ. ಪೂಜಾರಿ, ಕೌಶಿಕ್, ದಿಶಾ ಕೆ. ಪೂಜಾರಿ, ದಿಶಾಂತ್ ಪೂಜಾರಿ ಹಾಗೂ ಪೂರ್ವಿ ಬಿ.ಕೆ. ಅವರನ್ನು ಗೌರವಿಸಿ ಅಭಿನಂದಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ.) ಮಾಣಿ ಘಟಕದ ಅಧ್ಯಕ್ಷ ಗಣೇಶ್ ಸಾಯಿ ಕೊಡಾಜೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕ ಹರೀಶ್ ಬಾಕಿಲ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಗೌರವಾಧ್ಯಕ್ಷ ಈಶ್ವರ ಪೂಜಾರಿ, ನಿವೃತ್ತ ಕಾರ್ಯನಿರ್ವಹಣಾಧಿಕಾರಿ ಸಂಜೀವ ಪೂಜಾರಿ ಹಾಗೂ ವ್ಯಕ್ತಿತ್ವ ವಿಕಸನ ನಿರ್ದೇಶಕ ಸತೀಶ್ ಮುರುವ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಇಂತಹ ಕಾರ್ಯಕ್ರಮಗಳು ಅವರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿ ಇನ್ನಷ್ಟು ಸಾಧನೆಗೆ ಪ್ರೇರಣೆಯಾಗುತ್ತವೆ ಎಂದು ಅವರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಸೃಷ್ಟಿ ಸಿಂಧು ಶ್ರೇಯ ಪ್ರಾರ್ಥಿಸಿದರು. ಅಮಿತಾ ಪೆರ್ನೆ ಸ್ವಾಗತಿಸಿದರು. ಘಟಕದ ಕಾರ್ಯದರ್ಶಿ ವಿಶ್ವನಾಥ ಪೂಜಾರಿ ವಂದಿಸಿದರು. ಶುಭ ಪೆರ್ನೆ ಕಾರ್ಯಕ್ರಮವನ್ನು ನಿರೂಪಿಸಿದರು. ಸದಸ್ಯರು, ಪೋಷಕರು ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ನಡೆದ ಈ ಕಾರ್ಯಕ್ರಮವು ವಿದ್ಯಾರ್ಥಿಗಳ ಸಾಧನೆಯನ್ನು ಗೌರವಿಸುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡಲು ಪ್ರೇರಣೆ ನೀಡುವಂತಾಯಿತು.


