ಮೂಡುಬಿದಿರೆ, ಆಗಸ್ಟ್ 14: ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮ ಹಾಗೂ ಆರೋಗ್ಯದ ಮಹತ್ವದ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ಆಶ್ರಯದಲ್ಲಿ ‘ವಿದ್ಯಾರ್ಥಿ ಮನೋಹಿತ’ ಹಾಗೂ ಆರೋಗ್ಯ ಮಾಹಿತಿ ಕಾರ್ಯಾಗಾರವು ಮಿಜಾರು ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆಯಿತು.

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಆಳ್ವಾಸ್ ಪುನರ್ಜನ್ಮ ಮದ್ಯ–ಮಾದಕ ವಸ್ತು ವ್ಯಸನಮುಕ್ತಿ ಹಾಗೂ ಮನೋರೋಗ ಚಿಕಿತ್ಸಾ ಕೇಂದ್ರ, ಮಿಜಾರು ಮತ್ತು ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ, ಶೋಭಾವನ, ಮಿಜಾರು ಇವರ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಯುವವಾಹಿನಿ ಮೂಡುಬಿದಿರೆ ಘಟಕದ ಅಧ್ಯಕ್ಷ ಗಿರೀಶ್ ಕೋಟ್ಯಾನ್ ಮಾರೂರು ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಮುಖ್ಯೋಪಾಧ್ಯಾಯಿನಿ ಪುಷ್ಪ ಅತಿಥಿಗಳನ್ನು ಸ್ವಾಗತಿಸಿ ಮಾತನಾಡಿ, ವಿದ್ಯಾರ್ಥಿಗಳ ಆರೋಗ್ಯ, ಶಿಕ್ಷಣ ಹಾಗೂ ಉತ್ತಮ ಭವಿಷ್ಯದ ದೃಷ್ಟಿಯಿಂದ ಇಂತಹ ಜಾಗೃತಿ ಕಾರ್ಯಕ್ರಮಗಳ ಅಗತ್ಯವನ್ನು ವಿವರಿಸಿದರು. ಆಳ್ವಾಸ್ ಪುನರ್ಜನ್ಮದ ಆಪ್ತ ಸಮಾಲೋಚಕ ಲೋಹಿತ್ ಬಂಟ್ವಾಳ ಅವರು ಗುಟ್ಕಾ, ಮದ್ಯ ಹಾಗೂ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದೈಹಿಕ ಮತ್ತು ಮಾನಸಿಕ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು. ಮಾದಕ ವ್ಯಸನವು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಾಗೂ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರುವುದರಿಂದ ಉತ್ತಮ ಸ್ನೇಹ ಬಳಗವನ್ನು ಆಯ್ಕೆ ಮಾಡಿಕೊಂಡು ಕೆಟ್ಟ ಚಟಗಳಿಂದ ದೂರವಿರಬೇಕು ಎಂದು ಸಲಹೆ ನೀಡಿದರು.
ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಅಸೋಸಿಯೇಟ್ ಪ್ರೊಫೆಸರ್ ಡಾ. ಶರತ್ ಮಂಡಿಚ ಅವರು ‘ಹೋಮಿಯೋಪಥಿ–ಆರೋಗ್ಯದ ಅರಿವು’ ಕುರಿತು ಮಾಹಿತಿ ನೀಡಿದರು. ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ಕ್ಷೇಮವೇ ಸಮಗ್ರ ಆರೋಗ್ಯದ ಪ್ರಮುಖ ಅಂಶಗಳಾಗಿದ್ದು, ಯಾವುದೇ ಆರೋಗ್ಯ ಸಮಸ್ಯೆ ಎದುರಾದಾಗ ಸ್ವಯಂ ಔಷಧ ಸೇವಿಸದೆ ಅರ್ಹ ವೈದ್ಯರ ಸಲಹೆ ಪಡೆಯಬೇಕು ಎಂದು ತಿಳಿಸಿದರು. ಅಧ್ಯಕ್ಷ ಗಿರೀಶ್ ಕೋಟ್ಯಾನ್ ಮಾರೂರು ಮಾತನಾಡಿ, “ವಿದ್ಯಾರ್ಥಿ ಜೀವನ ಭವಿಷ್ಯ ರೂಪಿಸಿಕೊಳ್ಳುವ ಪ್ರಮುಖ ಹಂತ. ಈ ಹಂತದಲ್ಲಿಯೇ ಶಿಸ್ತು, ಉತ್ತಮ ಚಿಂತನೆ ಹಾಗೂ ಆರೋಗ್ಯಕರ ಜೀವನಶೈಲಿಯನ್ನು ಬೆಳೆಸಿಕೊಳ್ಳಬೇಕು. ವ್ಯಸನಗಳಿಂದ ದೂರವಿದ್ದು ಆರೋಗ್ಯವಂತ ಹಾಗೂ ಜವಾಬ್ದಾರಿಯುತ ಪ್ರಜೆಗಳಾಗಿ ರೂಪುಗೊಳ್ಳಬೇಕು” ಎಂದು ಕರೆ ನೀಡಿದರು.
ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳು ಸಂಪನ್ಮೂಲ ವ್ಯಕ್ತಿಗಳೊಂದಿಗೆ ಸಂವಾದ ನಡೆಸಿ, ವ್ಯಸನಮುಕ್ತ ಹಾಗೂ ಆರೋಗ್ಯಕರ ಜೀವನಶೈಲಿಗೆ ಸಂಬಂಧಿಸಿದ ಮಾಹಿತಿಯನ್ನು ಪಡೆದುಕೊಂಡರು. ಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಅನಿತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.


