ಹೆಜಮಾಡಿ, ಆಗಸ್ಟ್ 15: ಯುವವಾಹಿನಿ (ರಿ.) ಹೆಜಮಾಡಿ ಘಟಕದ ವತಿಯಿಂದ ಹೆಜಮಾಡಿ ಬಿಲ್ಲವರ ಸಂಘದ ಸಹಯೋಗದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಹಾಗೂ ವನಮಹೋತ್ಸವ ಕಾರ್ಯಕ್ರಮವು ಆಗಸ್ಟ್ 15ರಂದು ನಡೆಯಿತು. ಹೆಜಮಾಡಿ ಬಿಲ್ಲವರ ಸಂಘದಲ್ಲಿ ನಡೆದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಸಂಘದ ಅಧ್ಯಕ್ಷ ಮೋಹನ್ ದಾಸ್ ಹೆಜಮಾಡಿ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯುವಜನತೆ ಸಮಾಜಕ್ಕೆ ಹೆಚ್ಚಿನ ಕೊಡುಗೆ ನೀಡುವ ಮನೋಭಾವ ಬೆಳೆಸಿಕೊಳ್ಳಬೇಕು. ಮಕ್ಕಳು ಉತ್ತಮ ಶಿಕ್ಷಣ ಪಡೆದು, ಜವಾಬ್ದಾರಿಯುತ ಹಾಗೂ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳುವ ನಿಟ್ಟಿನಲ್ಲಿ ಪೋಷಕರು ಮತ್ತು ಸಮಾಜ ಒಟ್ಟಾಗಿ ಶ್ರಮಿಸಬೇಕು ಎಂದು ಹೇಳಿದರು. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಿದ ಅವರು, ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನೇ ತ್ಯಾಗ ಮಾಡಿದ ಹೋರಾಟಗಾರರ ಕೊಡುಗೆಯನ್ನು ಸದಾ ನೆನಪಿಸಿಕೊಳ್ಳಬೇಕು ಎಂದರು. 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಎಲ್ಲರಿಗೂ ಶುಭಾಶಯಗಳನ್ನು ಕೋರಿದರು.
ಧ್ವಜಾರೋಹಣದ ಬಳಿಕ ಯುವವಾಹಿನಿ (ರಿ.) ಹೆಜಮಾಡಿ ಘಟಕದ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಪರಿಸರ ಸಂರಕ್ಷಣೆ ಹಾಗೂ ಹಸಿರು ಪರಿಸರ ನಿರ್ಮಾಣದ ಮಹತ್ವವನ್ನು ಸಾರುವ ನಿಟ್ಟಿನಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸ್ವಾತಂತ್ರ್ಯದ ಸಂಭ್ರಮದೊಂದಿಗೆ ಪರಿಸರ ಸಂರಕ್ಷಣೆಯ ಜವಾಬ್ದಾರಿಯನ್ನು ನೆನಪಿಸುವ ಮೂಲಕ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು.


