ಮಂಗಳೂರು, ಆಗಸ್ಟ್ 15: ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಹಿರಿಯರು ಹಾಗೂ ದೇಶದ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸೈನಿಕರನ್ನು ಸ್ಮರಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್ ಹೇಳಿದರು.

ಅವರು ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಉರ್ವಸ್ಟೋರ್‌ನ ಯುವವಾಹಿನಿ ಸಭಾಂಗಣದಲ್ಲಿ ಆಗಸ್ಟ್ 15ರಂದು ನಡೆದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. “ನಾವು ಇಂದು ನೆಮ್ಮದಿಯಾಗಿ ಬದುಕಲು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಹಾಗೂ ಸೈನಿಕರ ಸೇವೆಯೇ ಪ್ರಮುಖ ಕಾರಣ. ಅವರ ಕೊಡುಗೆಯನ್ನು ಸದಾ ಸ್ಮರಿಸಬೇಕು” ಎಂದು ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಘಟಕದ ಅಧ್ಯಕ್ಷ ಹರೀಶ್ ಕೆ. ಸುವರ್ಣ ಮಾತನಾಡಿ, ದೇಶ ಸ್ವಾತಂತ್ರ್ಯ ಪಡೆದ ಬಳಿಕ ನಾವು ವಿವಿಧ ಕ್ಷೇತ್ರಗಳಲ್ಲಿ ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದರೂ, ಅತಿಯಾದ ವಾಕ್ ಸ್ವಾತಂತ್ರ್ಯದ ದುರ್ಬಳಕೆ ಹಾಗೂ ಆಂತರಿಕ ಭದ್ರತೆಗೆ ಸಂಬಂಧಿಸಿದ ಸವಾಲುಗಳು ಸಮಾಜದ ಮುಂದಿವೆ. ದೇಶದ ಏಕತೆ ಮತ್ತು ಭದ್ರತೆಯನ್ನು ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಹೇಳಿದರು.
ಧ್ವಜಾರೋಹಣವನ್ನು ಘಟಕದ ಗೌರವ ಸದಸ್ಯ ಭಾಸ್ಕರ ಪೂಜಾರಿ ನೆರವೇರಿಸಿ, ಸರ್ವರಿಗೂ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದರು. ಗುರು ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಮಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಕಸ್ತೂರಿ ಮಹೇಶ್, ಮಂಗಳೂರು ಘಟಕದ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಘಟಕದ ಸದಸ್ಯ ಸತೀಶ್ ಕೆ. ಕಾರ್ಯಕ್ರಮ ನಿರೂಪಿಸಿದರು. ಪ್ರಥಮ ಉಪಾಧ್ಯಕ್ಷ ಯತೀಶ್ ಬಳಂಜ ಸ್ವಾಗತಿಸಿದರು. ಕಾರ್ಯದರ್ಶಿ ಕುಮಾರಿ ಉಷಾ ಧನ್ಯವಾದ ಸಲ್ಲಿಸಿದರು. ಕಾರ್ಯಕ್ರಮದ ಬಳಿಕ ಆಗಮಿಸಿದ ಎಲ್ಲರಿಗೂ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.


