ಮಾಣಿ ಸೆ 10 : ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಹಾಗೂ ಅವರ ಅಗತ್ಯಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಸೆಪ್ಟೆಂಬರ್ 10ರಂದು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಏಮಾಜೆಯ ಎಲ್‌ಕೆಜಿ ಹಾಗೂ ಯುಕೆಜಿ ವಿದ್ಯಾರ್ಥಿಗಳಿಗೆ ಸಮವಸ್ತ್ರಗಳನ್ನು ವಿತರಿಸಲಾಯಿತು.
ವಿದ್ಯಾರ್ಥಿಗಳ ಮೇಲಿನ ಅಭಿಮಾನ ಹಾಗೂ ಕಾಳಜಿಯಿಂದ ಯುವವಾಹಿನಿ (ರಿ.) ಮಾಣಿ ಘಟಕದ ಸಂಘಟನಾ ಕಾರ್ಯದರ್ಶಿ ಸುಚಿತ್ ಅಂಚನ್ ಅವರು ಸಮವಸ್ತ್ರಗಳ ಸಂಪೂರ್ಣ ವೆಚ್ಚವನ್ನು ಭರಿಸುವ ಮೂಲಕ ಈ ಸೇವಾ ಕಾರ್ಯಕ್ಕೆ ಆರ್ಥಿಕ ಸಹಕಾರ ನೀಡಿದರು.

ಈ ಸಂದರ್ಭದಲ್ಲಿ ಯುವವಾಹಿನಿ (ರಿ.) ಮಾಣಿ ಘಟಕದ ಅಧ್ಯಕ್ಷ ಗಣೇಶ್ ಪೂಜಾರಿ ಕೊಡಾಜೆ, ಮಾಜಿ ಅಧ್ಯಕ್ಷ ಹರೀಶ್ ಪೂಜಾರಿ ಬಾಕಿಲ, ಕಲೆ ಮತ್ತು ಸಾಹಿತ್ಯ ನಿರ್ದೇಶಕ ರಾಜೇಶ್ ಕೋಟ್ಯಾನ್, ಸಂಘಟನಾ ಕಾರ್ಯದರ್ಶಿ ಮೋಹನ್ ಮುಜಾಲ, ಸುಜೀತ್ ಬಾಕಿಲ ಹಾಗೂ ಸದಸ್ಯರಾದ ನಿಶಾಂತ್, ವಸಂತಿಕೃಷ್ಣಪ್ಪ ಉಪಸ್ಥಿತರಿದ್ದರು.
ಮಕ್ಕಳಿಗೆ ಅಗತ್ಯವಿರುವ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸುವ ಮೂಲಕ ಅವರಲ್ಲಿ ಆತ್ಮವಿಶ್ವಾಸ ಮೂಡಿಸುವುದು ಹಾಗೂ ಶಿಕ್ಷಣದತ್ತ ಹೆಚ್ಚಿನ ಆಸಕ್ತಿ ಬೆಳೆಸುವುದು ಈ ಸೇವಾ ಕಾರ್ಯದ ಉದ್ದೇಶವಾಗಿದೆ. ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕೆ ಸಹಕಾರಿಯಾಗುವ ಇಂತಹ ಸಮಾಜಮುಖಿ ಕಾರ್ಯಗಳನ್ನು ಮುಂದುವರಿಸುವ ಸಂಕಲ್ಪವನ್ನು ಯುವವಾಹಿನಿ (ರಿ.) ಮಾಣಿ ಘಟಕ ಹೊಂದಿದೆ.







